ಉಡುಪಿ ಜಿಲ್ಲೆ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಜಾರಿ: ದಿನಕರ ಬಾಬು
ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ ನಡೆಯುತ್ತಿಲ್ಲ. ಅಂಗಡಿಗಳಲ್ಲಿ, ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡುತ್ತಿರುವುದು ಕಂಡು ಬರುತ್ತಿದೆ. ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ.ಅದ್ದರಿಂದ ನವೆಂಬರ್ 1 ರಿಂದ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ದಂಡ ದಾಖಲಿಸಿ, ಈ ಬಗ್ಗೆ ಗ್ರಾಮಗಳಲ್ಲಿ ಇಂದಿನಿಂದಲೇ ಜಾಗೃತಿ ಮೂಡಿಸುವಂತೆ ದಿನಕರ ಬಾಬು ಹೇಳಿದರು.
ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಯೋಜನಾ ನಿರ್ದೇಶಕ ಗುರುದತ್, ಯೋಜನೆ, ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ರಾಧಾಕೃಷ್ಣ ಅಡಿಗ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.