ಗ್ರಾ.ಪಂ. ಚುನಾವಣೆ-ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ
ಉಡುಪಿ, ಡಿ 02: ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ಮೊದಲ ಹಂತದ ಹಾಗೂ ಡಿಸೆಂಬರ್ 27 ರಂದು ಎರಡನೇ ಹಂತದ ಗ್ರಾಮ ಪಂಚಾಯತ್ಗಳ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹಾಗೂ ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ.
ಈ ಸಂದರ್ಭದಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ, ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 31 ರ ವರೆಗೆ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯಲ್ಲಿ ಶಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮಲ್ಲಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ಠೇವಣಿ ಮಾಡಿ ರಸೀದಿ ಪಡೆಯಬೇಕು.
ಈ ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ/ ಆಯುಧ ಮತ್ತು ಮದ್ದುಗುಂಡುಗಳ ಸಂಗ್ರಹ, ಬಳಕೆ, ಸಾಗಾಟ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.