ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

 ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ
Share this post

ಮಂಗಳೂರು, ಜನವರಿ 22, 2021: ಜಿಲ್ಲೆಯಲ್ಲಿ ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರೊಂದಿಗೆ  ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ 2ನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನೆಹರು ಮೈದಾನದಲ್ಲಿ ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು,  ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಲಿದ್ದಾರೆ ಹಾಗೂ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಆಗಮಿಸುತ್ತಿದ್ದು, ಎಲ್ಲಾ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಕೌಟ್ ಮಕ್ಕಳು ಭಾಗವಹಿಸಲಿದ್ದಾರೆ.

ಕೋವಿಡ್ ಹಿನ್ನೆಲೆ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ, ಆದರೆ ಪೊಲೀಸ್, ಗೃಹರಕ್ಷಕ ದಳದವರಿಂದ ಪಥಸಂಚಲನ ಮತ್ತು ಪರೇಡ್ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದವರಿಗೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ 7 ವೈದ್ಯಕೀಯ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದರು.

ಮತ್ತು ಕೊನೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಉಪ ಸಮಿತಿಗಳು ಕೈಗೊಂಡಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.

Subscribe to our newsletter!

Other related posts

error: Content is protected !!