ಉಡುಪಿಯಲ್ಲಿ ಮೆಗಾ ಲೋಕ್ ಅದಾಲತ್

 ಉಡುಪಿಯಲ್ಲಿ ಮೆಗಾ ಲೋಕ್ ಅದಾಲತ್
Share this post

ಉಡುಪಿ, ಮಾರ್ಚ್ 25, 2021: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 27 ರಂದು ಮೆಗಾ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್ಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು.

ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!