ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು : ಡಾ. ರಾಜೇಂದ್ರ. ಕೆ. ವಿ

 ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು : ಡಾ. ರಾಜೇಂದ್ರ. ಕೆ. ವಿ
Share this post

ಮಂಗಳೂರು, ಎಪ್ರಿಲ್ 7, 2021: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಅನಿರ್ಧಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು.

ಯಾವುದೇ ಪ್ರಯಾಣಿಕ ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್  ವಿಮಾ ನೋಂದಣಿ ಹೊಂದಿ, ಸಂಚಾರಕ್ಕೆ  ಯೋಗ್ಯವಾಗಿದ್ದು, ಚಾಲಕನು ನಿಗದಿತ ವಾಹನ ಚಾಲನಾ ಪತ್ರವನ್ನು ಹೊಂದಿದ್ದರೆ ತಾತ್ಕಾಲಿಕ ರಹದಾರಿ ಪಡೆದು ಅಥವಾ ಪಡೆಯದೇ ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಚಾಲನೆ ಮಾಡಬಹುದು ಎಂದರು.

ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ದುಬಾರಿ ದರವನ್ನು ಪಡೆಯುವಂತಿಲ್ಲ, ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದ ಅವರು, ವಾಹನಗಳಲ್ಲಿ ಸಂಚರಿಸುವಾಗ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಚಾಲಕರು ಹಾಗೂ ನಿರ್ವಾಹಕರು ಎಚ್ಚರ ವಹಿಸಬೇಕು. ತಪ್ಪಿದ್ದಲ್ಲಿ ವಾಹನ ಮಾಲೀಕರಿಂದಲೇ ದಂಡ ವಸೂಲಿ ಮಾಡಲಾಗುವುದು ಎಂದರು.

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಕೆ.ಎಸ್.ಆರ್.ಟಿ.ಸಿ ಪುತ್ತೂರು ಹಾಗೂ ಮಂಗಳೂರು ವಿಭಾಗಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯುವುದರ ಜೊತಗೆ ಸಹಾಯವಾಣಿಯನ್ನು ಆರಂಭಿಸಿ ಬರುವ ದೂರುಗಳನ್ನು ನೋಂದಣಿ ಮಾಡಿಕೊಳ್ಳುವುದರೊಂದಿಗೆ ಸೂಕ್ತ ಕ್ರಮ ಕಲ್ಪಿಸಬೇಕು.

ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿಗಳ ಮಾಹಿತಿಯನ್ನು ಕ್ರೋಢಿಕರಿಸಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವರ್ಣೇಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಮಲ್ಲೇ ಸ್ವಾಮಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್, ಖಾಸಗಿ ಬಸ್ ಮಾಲೀಕರ ಸಂಘ, ಮ್ಯಾಕ್ಸಿ ಕ್ಯಾಬ್ ಮಾಲೀಕರ ಸಂಘ ಸೇರಿದಂತೆ ಹಾಗೂ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!