ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಮಾರ್ಗ ಸೂಚಿಯನ್ನು ಜಾರಿಗೆ ತನ್ನಿ: ಕೋಟ ಶ್ರೀನಿವಾಸ್ ಪೂಜಾರಿ

 ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಮಾರ್ಗ ಸೂಚಿಯನ್ನು ಜಾರಿಗೆ ತನ್ನಿ: ಕೋಟ ಶ್ರೀನಿವಾಸ್ ಪೂಜಾರಿ
Share this post

ಮಂಗಳೂರು, ಎಪ್ರಿಲ್ 23, 2021: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಕಠಿಣ ನಿಯಮಗಳನ್ನೊಳಗೊಂಡ ಮಾರ್ಗ ಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದರು.

ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಅನಿವಾರ್ಯವಾಗಿ ಲಾಕ್‍ಡೌನ್‍ಗೆ ಸೂಚಿಸಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಬೇಕು. ಮನೆಯಿಂದ ಹೊರಬರದೆ ಅವಶ್ಯವಿದ್ದಲ್ಲಿ ಮಾತ್ರ ಹೊರಬರಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಸೇರಿದಂತೆ ಖಾಸಗೀಯ 66 ಆಸ್ಪತ್ರೆಗಳಲ್ಲಿ 4816 ಬೆಡ್‍ಗಳನ್ನು ಖಾಯ್ದಿರಿಸಲಾಗಿದ್ದು, ಅವುಗಳಲ್ಲಿ 3035 ಸಾಮಾನ್ಯ ಬೆಡ್‍ಗಳು, 1263 ಆಕ್ಸಿಜೆನ್ ಬೆಡ್‍ಗಳು, 243 ಹೈಪ್ರೆಷರ್ ಬೆಡ್‍ಗಳು, 135 ಐಸಿಯು ಬೆಡ್‍ಗಳು, 140 ವೆಂಟಿಲೇಟರ್ ಐಸಿಯು ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ ಎಂದರು.

ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಪೂರಕ ಔಷಧಿಗಳು ಸೇರಿದಂತೆ ರೆಮಿಡೀಸ್ ಸಿವಿಯರ್ ಹಾಗೂ ಆಕ್ಸಿಜೆನ್, ಕೊರೊನಾ ಪೀಡಿತರಿಗೆ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದರೊಂದಿಗೆ ಅಗತ್ಯ ದಾಸ್ತಾನು ಇರುವಂತೆ ಎಚ್ಚರವಹಿಸಿಬೇಕು ಎಂದು ಸೂಚಿಸಿದರು.

ಕೋವಿಡ್ ದೃಢಪಟ್ಟು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವಂತಹ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ಖಾಸಗೀ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ.

ಸಾಮಾನ್ಯ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ಕೋವಿಡ್ ಚಿಕಿತ್ಸೆಗೆ ನಿಗದಿಪಡಿಸಿರುವ ದರದಲ್ಲಿ ಶುಲ್ಕವನ್ನು ಪಡೆಯಬಹುದು. ಹೆಚ್ಚಿನ ಶುಲ್ಕ ಪಡೆದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದಾಗಿದೆ ಎಂದರು.

ಕೋವಿಡ್‍ನಿಂದಾಗಿ ಮರಣ ಹೊಂದುವವರ ಅಂತ್ಯ ಸಂಸ್ಕಾರರದ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಇದರ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳು ಸೇರಿದಂತೆ ಮಹಾನಗರ ಪಾಲಿಕೆ ನಿರ್ವಹಿಸಬೇಕು. ಇದರ ಮೇಲುಸ್ತುವಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.

ಕೊರೊನಾ ನಿರೋಧಕ ಚುಚ್ಚುಮದ್ದುಗಳನ್ನು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಇದನ್ನು ಅನುಷ್ಠಾನಗೊಳಿಸಲು ಅವಶ್ಯವಿರುವ ಚುಚ್ಚುಮದ್ದನ್ನು ದಾಸ್ತಾನು ಇಟ್ಟುಕೊಳ್ಳುವುದರೊಂದಿಗೆ ಎಲ್ಲರಿಗೂ ನೀಡಲು ಯೋಜನೆಯನ್ನು ಮಾಡಿಕೊಳ್ಳುವುದರೊಂದಿಗೆ ಚುಚ್ಚುಮದ್ದು ನೀಡಬೇಕೆಂದು ಸೂಚಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ತಂದಿರುವ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವಾಗ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ವಿಶ್ವಾಸವನ್ನು ತೆಗೆದುಕೊಂಡು ಮಾಡುವುದು ಒಳಿತು ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳು ಇತರ ಜಿಲ್ಲೆಗಳಿಗಿಂತ ಸ್ವಲ್ಪ ವಿಭಿನ್ನವಾಗಿದ್ದು, ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವಾಗ ಇಲ್ಲಿನ ಕಾರ್ಯಚಟುವಟಿಕೆಗಳನ್ನು ಅರಿತು ಕಾರ್ಯರೂಪಕ್ಕೆ ತರಬೇಕು. ಮೀನುಗಾರಿಕಾ ಚಟುವಟುಕೆಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು, ಹೊರ ರಾಜ್ಯದಿಂದ ಉದ್ಯೋಗ ಹರಸಿ ಕಟ್ಟಡ ನಿರ್ಮಾಣ ಸೇರಿದಂತೆ ಮತ್ತಿತರ ಕೆಲಸ ನಿರ್ವಹಿಸಲು ಬಂದಿರುವ ಕಾರ್ಮಿಕರು ವಾಪಸ್ಸು ಹೋಗದಂತೆ ಎಚ್ಚರವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹಾಗೂ ಚಿಕಿತ್ಸೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಯ ನಿರ್ವಹಣೆಯ ಮೇಲುಸ್ತುವಾರಿಗೆ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ ಎಂದರು.

ಕೆ.ಎಂ.ಸಿ ಯ ಅಧಿಕಾರಿಗಳಿಗೆ ಹೆಚ್ಚಿನ ವೈದ್ಯರುಗಳು, ಶುಶ್ರೂಷಕರು ಹಾಗೂ ಮತ್ತಿತರ ಸಿಬ್ಬಂದಿಗಳನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆಯ ಉಪಮೇಯರ್ ಸುಮಂಗಳಾ ರಾವ್, ಪೋಲಿಸ್ ಆಯುಕ್ತ ಶಶಿಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!