ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 25, 2021: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.