ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಾ.ಕುಮಾರ್
ಮಂಗಳೂರು, ಎಪ್ರಿಲ್ 29, 2021: ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಲ ಜೀವನ್ ಮಿಷನ್ ಯೋಜನೆಯಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.
ಸರಕಾರ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಶುದ್ಧ ನೀರು ಪೂರೈಕೆಗೆ ಮುಂದಾಗಿದೆ. ಕಳೆದ ಸಾಲಿನಲ್ಲಿ ಶುದ್ಧ ಕುಡಿಯುವ ನೀರು ಗ್ರಾಮೀಣ ಭಾಗದ 53774 ಸಾವಿರ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಕೈಗೊಳ್ಳಲು 149 ಕೋಟಿ ಮಂಜೂರಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುಸ್ಥಿರ ನೀರಿನ ಮೂಲಗಳು, ಡ್ಯಾಮ್‍ಗಳು ಹಾಗೂ ವರ್ಷಪೂರ್ತಿ ನೀರಿನ ಲಭ್ಯತೆ ಹೊಂದಿರುವ ಭಾಗಗಳನ್ನು ಗುರುತಿಸುವುದರೊಂದಿಗೆ ಹೊಸ 7 ಬಹು ಗ್ರಾಮ ಕುಡಿಯುವ ನೀರಿನ ಯೋಜನೆ 450 ಕೋಟಿ ರೂ. ವೆಚ್ಚದಲ್ಲ್ಲಿ ಕೈಗೊಂಡು ನಂತರ 2023-24 ನೇ ಸಾಲಿನಲ್ಲಿ 32 ಸಾವಿರ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಅಂತರ್ಜಲವನ್ನು ಹೆಚ್ಚಿಸಲು ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಜಲ ಪೂರ್ಣ ಘಟಕಗಳ ಅಭಿವೃದ್ಧಿ, ಕಲ್ಯಾಣಿ ಮತ್ತು ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರಕಾರಿ ಕಟ್ಟಡಗಳು ಸೇರಿದಂತೆ ಖಾಸಗಿ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಘಟಕಗಳನ್ನು ಸ್ಥಾಪಿಸಿ, ನೀರನ್ನು ಇಂಗಿಸುವುದರಿಂದ ಅಂತರ್ಜಲ ವೃದ್ಧಿಸಲು ಸಾಧ್ಯವಾಗುತ್ತದೆ. ಇದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರ ಬಾಬು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ನಿರ್ದೇಶಕಿ ಹೇಮಲತಾ ಬಿ.ಎಸ್, ಜಂಟಿ ಕೃಷಿ ನಿರ್ದೇಶಕಿ ಸೀತಾ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಇಂಜಿನಿಯರ್ ಗೋಪಿ ಆರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು