ತೌಕ್ತೆ ಚಂಡಮಾರುತ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಭಾಗಶಃ ಹಾನಿ
ಮಂಗಳೂರು, ಮೇ 16 : ತೌಕ್ತೆ ಚಂಡಮಾರುತ ಪ್ರಭಾವದಿಂದ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 380 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರಿನ ಪೂರ್ವ ಸಿದ್ಧತೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 28 ಪ್ರದೇಶಗಳಿಗೆ ಹಾನಿ ಉಂಟಾಗಿದೆ. ಮಳೆ ಹಾಗೂ ಗಾಳಿಯಿಂದಾಗಿ 84 ಕುಟುಂಬಗಳಿಗೆ ತೊಂದರೆಯಾಗಿದ್ದು, 14 ಮನೆಗಳು ಸಂಪೂರ್ಣ ಹಾಳಾಗಿದೆ ಹಾಗೂ 108 ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಕೃಷಿಯೇತರ ಚಟುವಟಿಕೆ ಹಾಗೂ ಪ್ರಾಣಿಗಳಿಗೆ ಯಾವುದೇ ಹಾನಿಯುಂಟಾಗಿರುವುದಿಲ್ಲ ಎಂದರು.
ಕಳೆದ ಎರಡು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ತೌಕ್ತೆ ಚಂಡಮಾರುತದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮತ್ತು ಗಾಳಿ ಬೀಸುವುದರಿಂದಾಗಿ ಅಲೆಗಳು ಸಮುದ್ರದ ತೀರದಲ್ಲಿನ ಮನೆಗಳಿಗೆ ಹಾಗೂ ನದಿ, ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಗಾಳಿಯಿಂದಗಿ ಮರಗಳು ಕೂಡ ಬಿದ್ದಿದ್ದು, ಜಿಲ್ಲಾಡಳಿದಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿರುವುದರಿಂದ ಯಾವುದೇ ಸಾವು ನೋವುಗಳು ಕಂಡುಬಂದಿಲ್ಲ ಎಂದು ಸಚಿವರು ಹೇಳಿದರು.
ಮುಂಬರುವ ಮಾನ್ಸೂನ್ ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ನೆರೆಹಾವಳಿ ಸೇರಿದಂತೆ ಮತ್ತಿತರ ತುರ್ತುಪರಿಸ್ಥಿಯನ್ನು ಎದುರಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಂಡು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಅವರು ಹೇಳಿದರು.
ನೆರೆ ಸಂತ್ರಸ್ಥರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮುನ್ನ ಅವರ ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು , ಸೋಂಕು ದೃಢಪಟ್ಟಲ್ಲಿ ಅಂತವರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಯಿಸಬೇಕು ಎಂದರು.
ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಬೇಕು. ಗುರುತಿಸದೇ ಇರುವ ಪ್ರದೇಶಗಳಲ್ಲಿ ನೆರೆ ಹಾವಳಿ ಉಂಟಾದಲ್ಲಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದ ತುರ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು. ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸರಬರಾಜಿನಲ್ಲಿ ತೊಂದರೆ ಉಂಟಾದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಸೂಕ್ತವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದರು.