ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿ: ಡಾ. ರಾಜೇಂದ್ರ ಕೆ.ವಿ

 ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿ: ಡಾ. ರಾಜೇಂದ್ರ ಕೆ.ವಿ
Share this post

ಮಂಗಳೂರು, ಜೂನ್ 07, 2021: ಪ್ರವಾಹ, ಅತಿವೃಷ್ಟಿ ಸೇರಿದಂತೆ ಮತ್ತಿತರ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಮಂಗಾರು ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಬರುವ ಮುಂಗಾರು ಮಳೆಯು ಹೆಚ್ಛಾಗಿ ಜಿಲ್ಲೆಯಲ್ಲಿ ಯಾವುದೇ ಪ್ರಾಣ ಹಾನಿಯಾಗದಂತೆ, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಸ್ವತ್ತುಗಳಿಗೆ ಹಾನಿ ಉಂಟಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜೂನ್ 14 ರ ನಂತರ ಮುಂಗಾರು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಮಳೆ ಹಾನಿಗೊಳಗಾದ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಒದಗಿಸಬೇಕು. ಅಂತಹ ಸಂದರ್ಭದಲ್ಲಿ ಯಾವುದೇ ಅರ್ಹ ವ್ಯಕ್ತಿಯು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಹೆಚ್ಚಿನ ಮಳೆಯಿಂದ ತೊಂದರೆಗೊಳಗಾಗುವ ಸಾಧ್ಯತೆಗಳು ಕಂಡುಬಂದಾಗ ಕೂಡಲೇ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ವರ್ಗಾವಣೆ ಮಾಡಿ, ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕೋವಿಡ್ ಸೋಂಕಿತರಿದ್ದಲ್ಲಿ ಅವರುಗಳನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಯಿಸಬೇಕು. ಹೋಮ್‍ಗಾರ್ಡ್ ಕಮಾಂಡೆಂಟ್‍ರವರು ಸಮುದ್ರದ ತೀರದ ಜವಬ್ದಾರಿಯನ್ನು ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ನೆರೆ ಹಾವಳಿಯ ಕುರಿತು ಅಣಕು ಪ್ರದರ್ಶನಗಳನ್ನು ಮಾಡುವುದರ ಮೂಲಕ ಜನಜಾಗೃತಿಯನ್ನು ಮೂಡಿಸಬೇಕು ಎಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಒಳ ಚರಂಡಿಗಳು ಮತ್ತು ಹೊಂಡಗಳನ್ನು ಸರಿಯಾಗಿ ಸ್ವಚ್ಛತೆ ಮಾಡಬೇಕು. ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿಗಳು ನೆರೆಹಾವಳಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ, ನೆರೆ ಹಾವಳಿಯಾದಾಗ ಅಲ್ಲಿ ವಾಸಿಸುವ ಕುಟುಂಬಗಳನ್ನು ಆದಷ್ಟು ಶೀಘ್ರವಾಗಿ ಕಾಳಜಿ ಕೇಂದ್ರಗಳಿಗೆ ವರ್ಗಾಹಿಸಬೇಕು ಮತ್ತು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಹಾನಿಗೆ ಒಳಗಾದ ಕೃಷಿ ಭೂಮಿಯ ಬಗ್ಗೆ ಜಿಲ್ಲಾಡಳಿತಕ್ಕೆ ಪ್ರತಿದಿನ ವರದಿ ನೀಡಬೇಕು ಎಂದರು.

ಗಾಳಿ-ಮಳೆಯಿಂದಾಗಿ ಮರಗಳು ರಸ್ತೆಗೆ ಉರುಳಿ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆಇರುತ್ತವೆ. ಅಂತಹ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಶೀಘ್ರವೇ ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮ್‍ಗಳು ಹಾಳಾದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಕೂಡಲೇ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಬೇಕು. ಮುಂಜಾಗ್ರತೆ ವಹಿಸಿ ಯಾವುದೇ ವಿದ್ಯುತ್ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಕೋವಿಡ್‍ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಾಸ್ಕ್ ಪೋರ್ಸ್‍ಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಕಾರ್ಯಪಡೆಯ ಸದಸ್ಯರುಗಳು ಕೋವಿಡ್ ಅನ್ನು ನಿಯಂತ್ರಣಕ್ಕೆ ತರಲು ಒಂದು ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತ್‍ನ ಸಿಬ್ಬಂದಿಗಳು ಮುಂಗಾರು ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತ ಸಭೆಗಳನ್ನು ನಡೆಸಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಪ್ರೊಬೆಷನರಿ ಐ.ಎ.ಎಸ್ ಅಧಿಕಾರಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಡಿಸಿಪಿ ಹರಿರಾಂ ಶಂಕರ್, ಎ.ಸಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ಕೋಶ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ. ಕಿಶೋರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!