ಪ್ರತಿಯೊಬ್ಬರೂ ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು: ಜಿ.ಪ್ರಭು
ಚಿಕ್ಕಮಗಳೂರು, ಆ. 03, 2021: ಪ್ರತಿಯೊಬ್ಬರು ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ಅವರು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಂಕ್ರಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತೆ ಕ್ರಮಗಳ ಬಗ್ಗೆ ಅಂತರ್ ಶಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಂಕ್ರಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೈರ್ಮಲ್ಯ ಕಾಪಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದ ಅವರು ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಕಟ್ಟಡಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಲ್ಲಾ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ತಿಳಿಸಿದರು.
ಸ್ಥಳಿಯ ಜನರಲ್ಲಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಂಕ್ರಮಿಕ ರೋಗಗಳು ಹರಡುವುದರ ಬಗ್ಗೆ ಮತ್ತು ಪರಿಸರವನ್ನು ಸ್ವಚ್ಛತೆಯಿಂದ ಕಾಪಡಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಸಾಂಕ್ರಮಿಕ ರೋಗಗಳು ಉದ್ಭವವಾಗುತ್ತಿದ್ದು, ಸೊಳ್ಳೆಗಳಿಂದ ಹರಡುವ ಸಾಂಕ್ರಮಿಕ ರೋಗದ ಬಗ್ಗೆ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ವ್ಯಾಪ್ತಿಯಲ್ಲಿ ಹಾಗೂ ಸಾರ್ವಜನಿಕ ಆವರಣಗಳಲ್ಲಿ ಸೊಳ್ಳೆ ಉತ್ಪತ್ತಿ ಮುಕ್ತವಾಗಿರುವುದಲ್ಲದೆ ಸ್ಚಚ್ಛತೆ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಲು ಸ್ವಯಂ ಪ್ರೇರಿತವಾಗಿ ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಮೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು