ಕೊರೋನಾ ಭೀತಿ ಹಿನ್ನೆಲೆ : ದ.ಕ. ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ವಾರಾಂತ್ಯ ಪ್ರವೇಶ ನಿರ್ಬಂಧ
ಮಂಗಳೂರು, ಆ. 04, 2021: ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಕೆಲವು ನಿರ್ಬಂಧ ಹೇರಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತ 1973 ರ ಕಲಂ 144 (3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ಆದೇಶ ಹೊರಡಿಸಿರುತ್ತಾರೆ.
ಆದೇಶ
- ಆಗಸ್ಟ್ 5 ರಿಂದ ಆಗಸ್ಟ್ 15 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ದೇವಸ್ಥಾನಗಳು ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಅಗತ್ಯ ಕೋವಿದ್ಯೆ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.
- ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಎಲ್ಲಾ ರೀತಿಯ ಉತ್ಸವ ಸೇವೆಗಳು, ತೀರ್ಥ ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿಬರ್ಂಧಿಸಿ, ಆರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
- ವಾರಾಂತ್ಯ ದಿನಗಳನ್ನು ಹೊರತುಪಡಿಸಿ (ಶನಿವಾರ ಮತ್ತು ಭಾನುವಾರ) ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ RT-PCR ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ಕೋವಿಡ್ ಶಿಷ್ಟಾಚಾರ ನಿಯಮ ಪಾಲಿಸುವ ದೃಷ್ಟಿಯಿಂದ ಕೊಠಡಿಗಳಲ್ಲಿ ಕಡ್ಡಾಯವಾಗಿ ಹೆಚ್ಚುವರಿ ವ್ಯಕ್ತಿಗಳು ತಂಗಲು ಅವಕಾಶವಿರುವುದಿಲ್ಲ. ಎಲ್ಲಾ ಕೊಠಡಿಗಳನ್ನು ವಾಸ್ತವ್ಯಕ್ಕೆ ಮುಂಚೆ ಸ್ಯಾನಿಟೈಸ್ ಮಾಡತಕ್ಕದ್ದು ಹಾಗೂ ಭಕ್ತಾದಿಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2001 ರ ಕಲಂ 51 ರಿಂದ 60 ರನ್ವಯ ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.