ಕೋವಿಡ್ 3 ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು: ಸಚಿವ ವಿ.ಸುನೀಲ್ ಕುಮಾರ್
ಉಡುಪಿ, ಆಗಸ್ಟ್. 9, 2021: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ ಸಮಾಜವೂ ಆರೋಗ್ಯದಿಂದ ಇರಲು ಸಾಧ್ಯ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ, 16.5 ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾಡಳಿತಕ್ಕೆ ನೀಡಿದ ಆಂಬುಲೆನ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಎದುರಾದ ಎಲ್ಲಾ ಸವಾಲುಗಳನ್ನು ಸರಕಾರ ಸಮರ್ಥವಾಗಿ ಎದುರಿಸಿದೆ, ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಸರಕಾರದ ಕಾರ್ಯದಲ್ಲಿ ಸಾರ್ವಜನಿಕ ಸಂಘ ಸಂಸ್ಥೆಗಳು ಹೆಚ್ಚಿನ ನೆರವು ನೀಡುವುದರ ಮೂಲಕ ಹಾಗೂ ದಾನಿಗಳು ನೀಡಿದ ಕೊಡುಗೆಗಳ ಮೂಲಕ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸುಸ್ಥಿರಗೊಳಿಸಲು ಸಾಧ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ, ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಅಧ್ಯಕ್ಷ ಎಂ. ಶ್ರೀನಿವಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.