ದಕ್ಷಿಣ ಕನ್ನಡ : ವಾರಾಂತ್ಯ, ರಾತ್ರಿ ಕರ್ಫ್ಯೂ ಮಾರ್ಗಸೂಚಿ ಪ್ರಕಟ
ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ ಜಿಲ್ಲಾಧಿಕಾರಿ
ಮಂಗಳೂರು ಆ.31, 2021: ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿರುತ್ತಾರೆ.
ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವಂತೆ ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರ (Hall Ticket) ವನ್ನು ಅಧಿಕೃತವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪಾಸ್ ಎಂದು ಪರಿಗಣಿಸುವುದು.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಿಗೆ ಮಾತ್ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ವಿವಾಹ ಅಥವಾ ಕೌಟುಂಬಿಕ ಕಾರ್ಯಗಳನ್ನು ಗರಿಷ್ಟ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿಸಿದೆ.
ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳು (ನರ್ಸಿಂಗ್, ವೈದ್ಯಕೀಯ, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಇತ್ಯಾದಿ ಸೇರಿದಂತೆ) 72 ಗಂಟೆಗಳಿಗಿಂತ ಮುಂಚಿತವಾಗಿ RT-PCR ನೆಗೆಟಿವ್ ವರದಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶವಿರುತ್ತದೆ ಮತ್ತು ಅವರನ್ನು 7 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‍ಗೆ ಒಳಪಡಿಸಿ, 7 ದಿನಗಳ ನಂತರ RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸಲಾಗುವುದು.
ಈ ಮಾರ್ಗಸೂಚಿಯು ಕೇರಳದಿಂದ ಜಿಲ್ಲೆಗೆ ಉದ್ಯೋಗದ ಸಲುವಾಗಿ ಅಥವಾ ಭೇಟಿ ಕಾರಣಕ್ಕಾಗಿ ಆಗಮಿಸುವ ಪ್ರತಿಯೊಬ್ಬರಿಗೆ ಅನ್ವಯವಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಸಂದರ್ಭದಲ್ಲಿ ಕಡ್ಡಾಯವಾಗಿ RT-PCR ನೆಗೆಟಿವ್ ವರದಿಯನ್ನು ಹಾಜರುಪಡಿಸತಕ್ಕದ್ದು ಹಾಗೂ ತಮ್ಮ ಸಿಬ್ಬಂದಿಗಳು RT-PCR ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ಖಾತ್ರಿಪಡಿಸಿಕೊಳ್ಳುವ ಜವಬ್ದಾರಿಯು ಆಯಾ ಸಂಸ್ಥೆಗೆ ಸೇರಿರುತ್ತದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು.
ರಾತ್ರಿ ಕಪ್ರ್ಯೂ ಮಾರ್ಗಸೂಚಿಗಳು ಇಂತಿವೆ:
- ಸಾರ್ವಜನಿಕರ ಓಡಾಟವನ್ನು ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ಅತ್ಯಾವಶ್ಯಕ ಹಾಗೂ ತುರ್ತು ಸಂದರ್ಭಗಳನ್ನು ಹೊರತು ಪಡಿಸಿ ಸಂಪೂರ್ಣವಾಗಿ ನಿಷೇಧಿಸಿದೆ.
- ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು ಅಥವಾ ವ್ಯಕ್ತಿಗಳಿಗೆ ಸಂಚರಿಸಲು ಅನುಮತಿ ಇದೆ. ರಾತ್ರಿ ವೇಳೆಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿರುವಂತಹ ಎಲ್ಲಾ ಕೈಗಾರಿಕೆಗಳು ಅಥವಾ ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇರುತ್ತದೆ. ಅಂತಹ ಸಂಸ್ಥೆಗಳ ನೌಕರರ ಸಂಚಾರಕ್ಕೆ, ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ.
- ದೂರವಾಣಿ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ.
- ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪನಿಗಳು, ಸಂಸ್ಥೆಯ ಅತ್ಯಾವಶ್ಯಕ ಸಿಬ್ಬಂದಿ, ನೌಕರರು ಮಾತ್ರ ಕಚೇರಿಯಿಂದ ಕಾರ್ಯನಿರ್ವಹಿಸಬೇಕು, ಉಳಿದ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
ಔಷಧ ಮಳಿಗೆಗಳು ಸೇರಿದಂತೆ ವೈದ್ಯಕೀಯ, ತುರ್ತು ಮತ್ತು ಅತ್ಯಾವಶ್ಯಕ ಸೇವೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ, ಉಳಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ. - ಖಾಲಿ ವಾಹನಗಳು ಸೇರಿದಂತೆ, ಟ್ರಕ್‍ಗಳು, ಸರಕು ಸಾಗಣೆ ವಾಹನಗಳು ಅಥವಾ ಯಾವುದೇ ಸರಕು ಸಾಗಣೆ ವಾಹನಗಳ ಮೂಲಕ ಎಲ್ಲಾ ಬಗೆಯ ಸರಕುಗಳನ್ನು ಸಾಗಿಸುವುದಕ್ಕೆ ಯಾವುದೇ ನಿಬರ್ಂಧವಿಲ್ಲ. ಇ-ವಾಣಿಜ್ಯ ಕಂಪನಿಗಳಿಂದ ಸರಕುಗಳ ಹೋಮ್ ಡೆಲಿವರಿಗೆ ಮತ್ತು ಅವುಗಳ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಗಿದೆ.
- ಬಸ್ಸು, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಲಾಗಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣಗಳಿಗೆ, ಬಸ್ ಟರ್ಮಿನಲ್, ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
- ಅಧಿಕೃತ ಪ್ರಯಾಣ ದಾಖಲೆ ಅಥವಾ ಟಿಕೇಟ್ ಅನ್ನು ಪ್ರದರ್ಶಿಸಿದ ನಂತರವೇ ಅಂತಹ ಸಂಚಾರಕ್ಕೆ ಅನುಮತಿ ನೀಡಲಾಗುವುದು.
ವಾರಾಂತ್ಯದ ಕಪ್ರ್ಯೂ ಮಾರ್ಗಸೂಚಿಗಳಿವು:
- ಅತ್ಯಾವಶ್ಯಕ ಮತ್ತು ತುರ್ತು ಕಾರ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ಸಂಜೆ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
- ತುರ್ತು, ಅತ್ಯವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ಅನಿಬರ್ಂಧಿತ ಓಡಾಟಕ್ಕೆ ಅವಕಾಶ ನೀಡಲಾಗಿದೆ.
- ತುರ್ತು ಮತ್ತು ಅತ್ಯವಶ್ಯಕ ಸೇವೆಗಳನ್ನು ನಿರ್ವಹಿಸುವ ಮತ್ತು 24×7 ಕಾರ್ಯಾಚರಣೆಗಳು ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದೂ, ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ ಅಥವಾ ಸಂಸ್ಥೆಗಳು ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸಲಾಗಿದೆ. ಆದರೆ, ಸಾಧ್ಯವಾದಷ್ಟು ಮಟ್ಟಿಗೆ ನೌಕರರನ್ನು ಮನೆಯಿಂದಲೇ ಕಾರ್ಯನಿರ್ವಹಿಸುವುದಕ್ಕೆ ಪ್ರೋತ್ಸಾಹಿಸಬೇಕು.
- ದೂರ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿರುವ ಅಧಿಕೃತ ಗುರುತಿನ ಚೀಟಿ ಹಾಜರುಪಡಿಸಿದ ನಂತರ ಅನುಮತಿಸಲಾಗಿದೆ.
- ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪನಿಗಳು, ಸಂಸ್ಥೆಯ ಅತ್ಯಾವಶ್ಯಕ ಸಿಬ್ಬಂದಿ ಮತ್ತು ನೌಕರರು ಮಾತ್ರ ಕಚೇರಿಯಿಂದ ಕಾರ್ಯನಿರ್ವಹಿಸಬೇಕು. ಉಳಿದ ಸಿಬ್ಬಂದಿಯು ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
- ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು ಅಥವಾ ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ದಾಖಲೆಗಳನ್ನು ಹಾಜರುಪಡಿಸಿ ಸಂಚರಿಸಲು ಅನುಮತಿ ನೀಡಲಾಗಿದೆ.
ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯನಿರ್ವಹಿಸಲು ಈ ಕೆಳಕಂಡ ಚಟುವಟಿಕೆಗಳಿಗೆ ಅನುಮತಿಸಿದೆ. - ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು, ಬೀದಿ ಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳು ಪಾರ್ಸೆಲ್ ಕೊಂಡು ಹೋಗಲು ಮಾತ್ರವೇ ಅವಕಾಶ ನೀಡಲಾಗಿದೆ.
- ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24×7 ಅವಧಿಯಲ್ಲಿ ಎಲ್ಲಾ ಸಾಮಗ್ರಿಗಳನ್ನು ಹೋಮ್ ಡೆಲಿವೆರಿ ಮಾಡಲು ಪೆÇ್ರೀತ್ಸಾಹಿಸತಕ್ಕದ್ದು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್ ಮತ್ತು ಹೊಟೇಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿ ನೀಡಲು ಮಾತ್ರ ಅನುಮತಿ ನೀಡಲಾಗಿದೆ.
- ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣಗಳಿಗೆ, ಬಸ್ ಟರ್ಮಿನಲ್ ಅಥವಾ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಧಿಕೃತ ಪ್ರಯಾಣ ದಾಖಲೆ ಅಥವಾ ಟಿಕೇಟ್ ಪ್ರದರ್ಶಿಸಿದ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಿದ ನಂತರವೇ ಅಂತಹ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.