ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ

 ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ
Share this post

ಮಂಗಳೂರು, ಅ 18, 2021: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಸೋಮವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು.

ಈ ಸಂದರ್ಭದಲ್ಲಿ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮು ನಡೆಸಿರಬೇಕು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಬ್ದಾರಿ ವಹಿಸಬೇಕು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕ್ರೀಡಾಂಗಣವನ್ನು ಸ್ವಚ್ಛ ಪಡಿಸುವ ಹಾಗೂ ಸಮತಟ್ಟು ಮಾಡುವ ಕೆಲಸವಾಗಬೇಕು. ಮಳೆಬರುವ ಸಾಧ್ಯತೆಗಳಿರುವುದರಿಂದ ಉತ್ತಮ ಪೆಂಡಾಲ್‍ಗಳನ್ನು ಹಾಕಬೇಕು ಎಂದರು.

ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.

ಡಿಸಿಪಿ ಹರಿರಾಮ್ ಶಂಕರ್ ,ಪ್ರೊಫೆಷನರಿ ಐಎಎಸ್ ಅಧಿಕಾರಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Subscribe to our newsletter!

Other related posts

error: Content is protected !!