ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

 ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ
Share this post

ಮಂಗಳೂರು, ನ 08, 2021: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ನವೆಂಬರ್ 10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು.

ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ನ. 8ರ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕರು, ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸಿಕೊಟ್ಟು, ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನನ ಮಾಡಲಿದ್ದಾರೆ, ಆ ಮೂಲಕ ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿಸಲಾಗವುದು ಎಂದು ಹೇಳಿದರು.

ಮೊದಲ ಹಂತದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಅಭಿಯಾನಕ್ಕೆ ಇದೇ ನ.10ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು. ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ಸಹ ನೀಡಲಾಗುವುದು ಎಂದು ತಿಳಿಸಿದರು.

ಈ ಹಿನ್ನಲೆಯಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸುವಂತೆ ಡಿಎಚ್‌ಒ ಕೋರಿದರು.

ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಹಾಗೂ ನಗರ ವ್ಯಾಪ್ತಿಯ ಎಲ್ಲಾ ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿಗಳು ಸಭೆಯಲ್ಲಿದ್ದರು.

Subscribe to our newsletter!

Other related posts

error: Content is protected !!