22 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು,ಜ.11, 2022: ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅಂದಾಜು 22 ಕೋಟಿ ರೂ.ಗಳ ಮೊತ್ತದಲ್ಲಿ ಮಂಗಳೂರು ಮೀನುಗಾರಿಕೆ ಬಂದರಿನ ಮೂರನೇ ಹಂತದಲ್ಲಿ ಹಾಗೂ ತೋಟಬೇಂಗ್ರೆ ಪ್ರದೇಶದಲ್ಲಿ ಮೀನುಗಾರರಿಗೆ ಅನುಕೂಲವಾಗುವ ಪ್ರಮುಖ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಜ.10ರ ಸೋಮವಾರ ನಗರದ ಜಿಲ್ಲಾಧಿಕಾರಿಯವ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಮಂಗಳೂರು ಮೀನುಗಾರಿಕಾ ಬಂದರಿನ ಮೂರನೇ ಹಂತದ ಅಭಿವೃದ್ಧಿ ಕಾಮಗಾರಿಗಳ ಚರ್ಚೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಈ ಪ್ರದೇಶದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅಡಚಣೆ ಮಾಡುತ್ತಿರುವ ಕೆಲವು ಅನಧಿಕೃತ ಕಟ್ಟಡಗಳನ್ನು ಕಾನೂನು ರೀತಿಯಲ್ಲಿ ತೆರವುಗೊಳಿಸುವಂತೆ ಮೀನುಗಾರಿಕೆ ಅಪರ ನಿರ್ದೇಶಕರಿಗೆ, ಬಂದರು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.
ಮುಂದುವರಿದು ಮಂಗಳೂರು ಮೀನುಗಾರಿಕೆ ಬಂದರಿನ ಮೂರನೇ ಹಂತದಲ್ಲಿ ಲಭ್ಯವಿರುವ ನಿವೇಶನದ ಗಡಿಯನ್ನು ಗುರುತು ಮಾಡಿ ಕೂಡಲೇ ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸುವಂತೆ ಬಂದರು ಅಧಿಕಾರಿಗಳಿಗೆ ತಿಳಿಸಿದ ಅವರು, ಮೀನುಗಾರಿಕೆ ಬಂದರಿನ ಅಭಿವೃದ್ಧಿಯ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಬರುವ ಕೆಲವು ಕಾಮಗಾರಿಗಳನ್ನು ವಿಲೀನಗೊಳಿಸಿ ಅಭಿವೃದ್ಧಿಪಡಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿತಿನ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಮೀನುಗಾರಿಕ ಅಪರ ನಿರ್ದೇಶಕರು, ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಭಿಯಂತರರು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.