ಡೆಂಗ್ಯೂ ತಡೆಗೆ ಅಗತ್ಯ ಮುನ್ನೆಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

 ಡೆಂಗ್ಯೂ ತಡೆಗೆ ಅಗತ್ಯ ಮುನ್ನೆಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
Share this post

ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು


ಮಂಗಳೂರು,ಮೇ.12, 2022: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗವು ಹೆಚ್ಚಿನ ಪ್ರಮಾಣದಲ್ಲಿ  ಕಾಣಿಸಿಕೊಳ್ಳುವ ಸಂಭವ ಇದೆ. ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು ಅಥವಾ ಸೊಳ್ಳೆ ಬತ್ತಿ, ಮುಲಾಮು, ಇತ್ಯಾದಿ ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಉತ್ತಮ. ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು. ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಬೇಕು ಎಂದು ಸಲಹೆ ನೀಡಿದರು.

ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿ ಬಂದರು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದ್ದು ಅಲ್ಲಿ ತಂಗಿರುವ ಬೋಟ್‍ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತದೆ. ಈ ಬಗ್ಗೆ  ಬೋಟ್ ಮಾಲೀಕರು ಮತ್ತು ಮೀನುಗಾರರಿಗೆ ಕೀಟಜನ್ಯ ರೋಗ ನಿಯಂತ್ರಣದ ಮಾಹಿತಿ ನೀಡುವಂತೆ ತಿಳಿಸಿದರು.  

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರು ಶಾಲೆಗಳು ಪ್ರಾರಂಭವಾಗುವ ಮುನ್ನ ಶಾಲೆಗೆ ಭೇಟಿ ನೀಡಿ ಶಾಲೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರವನ್ನು ಶುಚಿಯಾಗಿಡಬೇಕು. ಎಲ್ಲಿಯೂ ನೀರು ನಿಲ್ಲದಂತೆ, ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕೆ ವಹಿಸಬೇಕು. ಜ್ವರ ಸಮೀಕ್ಷೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಐ.ಆರ್.ಎಸ್ ಮಾಡಿಸಬೇಕು. ಜಿಲ್ಲೆಯ ಕಲ್ಲುಕೋರೆಗಳ ಮಾಲೀಕರು ಕೀಟಜನ್ಯ ರೋಗ ನಿಯಂತ್ರಣ ಹಾಗೂ ಕೋರೆಗಳಲ್ಲಿ ಗಪ್ಪಿ ಮೀನುಗಳನ್ನು ಬಿಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಬೇಕು. ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಕಾಮಗಾರಿಗಳಿಗೆ ಬಳಸುವ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಲೋಕೋಪಯೋಗಿ ಇಲಾಖೆಯವರು ಕ್ರಮ ವಹಿಸಬೇಕು ಎಂದವರು ಹೇಳಿದರು.

ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಮಲೇರಿಯಾ ರಕ್ತಲೇಪನ ಪರೀಕ್ಷೆ ನಡೆಸುವಂತೆ ಅವರು ಸೂಚಿಸಿದರು.

ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ ಚಿಕ್ಕ ಗುಳ್ಳೆಯ ಲಕ್ಷಣಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕ ಡಾ. ಸದಾಶಿವ ಶಾನುಭೋಗ, ಲೇಡಿಘೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗ ಪ್ರಸಾದ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಹಾಗೂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!