ನೆರೆ ಪೀಡಿತವಾಗುವ ಪ್ರದೇಶಗಳಲ್ಲಿ ಮುಂಜಾಗ್ರತೆ ಕೈಗೊಳ್ಳಿ : ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

 ನೆರೆ ಪೀಡಿತವಾಗುವ ಪ್ರದೇಶಗಳಲ್ಲಿ ಮುಂಜಾಗ್ರತೆ ಕೈಗೊಳ್ಳಿ : ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್
Share this post

ಉಡುಪಿ, ಮೇ 21, 2022: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿಟ್ಟುಕೊಂಡು, ಆ ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಮತ್ತು ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ ಸ್ಪಂದಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.   

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಗಳಿದ್ದು, ಆ ಪ್ರದೇಶದಲ್ಲಿ ನದಿ ನೀರು ಯಾವುದೇ ಅಡೆತಡೆಗಳಿಲ್ಲದೇ ಸರಾಗವಾಗಿ ಹರಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸಕಾಲದಲ್ಲಿ ಅಗತ್ಯ  ಮುನ್ಸೂಚನೆಗಳನ್ನು ನೀಡಿ, ಸುರಕ್ಷಿತ ಪ್ರದೇಶಗಳಿಗೆ ತೆರಳುವ ಕುರಿತು ಹಾಗೂ ಸುರಕ್ಷಿತ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿಯನ್ನು ನೀಡಿ, ಆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಿ ಎಂದ ಅವರು, ಇಂತಹ ಅಪಾಯ ಸ್ಥಳಗಳ ಸ್ಥಿತಿಗತಿ ಬಗ್ಗೆ ತಹಶೀಲ್ದಾರ್, ಪಿಡಿಓಗಳು ಮತ್ತು ಸಂಬAಧಪಟ್ಟ ಇಲಾಖೆಗಳ ಎಲ್ಲಾ ಅಧೀನ ಸಿಬ್ಬಂದಿಗಳು ಪ್ರತಿನಿತ್ಯ ಪರಿಶೀಲನೆ ನಡೆಸಿ, ತುರ್ತು ಸಂಧರ್ಭದಲ್ಲಿ ತಕ್ಷಣವೇ ಸಾರ್ವಜನಿಕರ ನೆರವಿಗೆ ಧಾವಿಸಬೇಕು ಎಂದರು.

ಮಾನ್ಸೂನ್ ಸಂದರ್ಭದಲ್ಲಿ ಗಾಳಿ-ಮಳೆಯಿಂದ ಮರಗಳು ಉರುಳುವ ಸಂಭವವಿದ್ದು, ಅಂತಹ ಅಪಾಯಕಾರಿ ಮರಗಳನ್ನು ಗುರುತಿಸಿ, ತೆರವುಗೊಳಿಸುವ ಕುರಿತು ತಕ್ಷಣವೇ ಕ್ರಮ ಕೈಗೊಳ್ಳಿ. ಇದಕ್ಕಾಗಿ ಅರಣ್ಯ ಇಲಾಖೆಯ ಅನುಮತಿ ವಿಳಂಬವಾದಲ್ಲಿ, ಮೊದಲು ಮರಗಳನ್ನು ತೆರವುಗೊಳಿಸಿ ನಂತರ ಘಟನೋತ್ತರ ಮಂಜೂರಾತಿ ಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಾಕೃತಿಕ ವಿಕೋಪದಂತಹ ಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಗಳಿಗೆ ಯಾವುದೇ ತೊಂದರೆಯಾಗದAತೆ ಮತ್ತು ವಿಳಂಬವಾಗದAತೆ ಎಲ್ಲಾ ರೀತಿಯ ನೆರವು ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಎಲ್ಲಾ ಶಾಲಾ ಕಟ್ಟಡಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಮುದಾಯ ಭವನಗಳ ಸ್ಥಿತಿಗತಿ ಕುರಿತು ಆಡಿಟ್ ನಡೆಸಿ, ಕಟ್ಟಡಗಳ ಸುರಕ್ಷತೆ ಬಗ್ಗೆ ಖಾತರಿಪಡಿಸಿಕೊಂಡು, ತುರ್ತು ಸಂದರ್ಭದಲ್ಲಿ ಅವುಗಳನ್ನು ಬಳಸಿಕೊಳ್ಳುವಂತೆ ಮತ್ತು ಅಪಾಯಕಾರಿ ಕಟ್ಟಡಗಳಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅಗತ್ಯ ಕ್ರಮ ಕೈಗೊಳ್ಳಿ. ವಿಕೋಪದಿಂದ ಮಾನವ ಜೀವ ಹಾನಿಯಾದಲ್ಲಿ ಈ ಕುರಿತ ಎಲ್ಲಾ ಪರೀಕ್ಷೆಗಳು ಮತ್ತು ವರದಿಗಳನ್ನು ಶೀಘ್ರದಲ್ಲಿ ಸಿದ್ಧಪಡಿಸಿ 24 ಗಂಟೆಯ ಒಳಗೆ ಪರಿಹಾರ ವಿತರಿಸಬೇಕು. ಇಂತಹ ಪ್ರಕರಣಗಳಲ್ಲಿ ಯಾವುದೇ ಹಂತದಲ್ಲಿ ವಿಳಂಬವಾಗದAತೆ ಕಾರ್ಯನಿರ್ವಹಿಸಬೇಕು ಎಂದರು.

ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆದು, ಅಲ್ಲಿಗೆ ನಿಯೋಜಿಸುವ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಿ, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಗತ್ಯವಿರುವೆಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಿ, ಅಲ್ಲಿ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಟ್ಟುಕೊಳ್ಳುವಂತೆ ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಮೇ 31 ರೊಳಗೆ ಎಲ್ಲಾ ಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಅದರಂತೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್,  ಕುಂದಾಪುರ ಡಿಎಫ್‌ಓ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!