ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ : ಪ್ರಸನ್ನ ಹೆಚ್

 ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ : ಪ್ರಸನ್ನ ಹೆಚ್
Share this post

ಉಡುಪಿ, ಜೂನ್ 08, 2022: ಹಾಸ್ಟೆಲ್ ಗಳಲ್ಲಿ  ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಪೂರಕವಾಗುವಂತಹ ವಾತಾವರಣವನ್ನು ಕಲ್ಪಿಸಿ ಅವರು ಉತ್ತಮ ಶಿಕ್ಷಣವಂತರನ್ನಾಗಿಸುವುದು ವಾರ್ಡ್‍ನ್ ಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್. ಹೇಳಿದರು.    

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ,  ಜಿಲ್ಲೆಯ ಎಲ್ಲಾ ಹಾಸ್ಟೆಲ್ ವಾರ್ಡನ್ ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ , ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮೂಲಕ  ವಿದ್ಯಾರ್ಥಿನಿಲಯಗಳ ಸೌಲಭ್ಯವನ್ನು ಕಲ್ಪಿಸಿ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಇದರ ಸದುಪಯೋಗ ಆಗಬೇಕು ಎಂದು ತಿಳಿಸಿದರು.

ಶ್ರೀಮಂತ ವರ್ಗದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಲು ಸಾಕಷ್ಟು ಹಣವನ್ನು ಖರ್ಚು ಮಾಡಿ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸಿ , ಸಂಸ್ಥೆಯವರು ವಿಧಿಸುವ ಎಲ್ಲಾ ರೀತಿಯ ಕಠಿಣ ಷರತ್ತಿಗೆ ಬದ್ದರಾಗಿ ಶಿಕ್ಷಣ ಕೊಡಿಸುತ್ತಾರೆ .  ಸರ್ಕಾರವೂ ಸಹ  ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಪಠ್ಯ ಪುಸ್ತಕ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ ಆದರೆ ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಣವಂತರಾಗುವಲ್ಲಿ ನಿರೀಕ್ಷಿತ ಪ್ರಮಾಣ ಕಂಡು ಬರುತ್ತಿಲ್ಲ ಹೀಗಾಗದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸರ್ಕಾರವು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವಂತರಾಗುವ ಉದ್ದೇಶದಿಂದ ಅನೇಕ ಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ರೂಪಿಸಿದೆ ಇವುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು , ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡದಂತೆ ಕಟ್ಟೆಚ್ಚರ ವಹಿಸಬೇಕು ಎಂದರು.

ವಿದ್ಯಾರ್ಥಿಗಳು ಪ್ರತಿದಿನ ಶಾಲಾ ಕಾಲೇಜುಗಳಿಗೆ ಹಾಜರಾಗುವ ಬಗ್ಗೆ ಮತ್ತು  ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಪರಿಶೀಲಿಸಬೇಕು. ಹಾಸ್ಟೆಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಪ್ರಾಮಾಣಿಕವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಿದ್ದಲ್ಲಿ,ವಿದ್ಯಾರ್ಥಿಗಳನ್ನು ನಿಯಂತ್ರಿಸಿ, ವಿದ್ಯಾಭ್ಯಾಸದೆಡೆಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಗಳಲ್ಲಿ ಇರುವ ಗಣಕಯಂತ್ರಗಳ ಸಮರ್ಪಕ ಬಳಕೆಯ ಬಗ್ಗೆ ಅವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು, ಮುಂದಿನ ದಿನಗಳಲ್ಲಿ ಅವರುಗಳು ಸ್ಪರ್ದಾತ್ಮಕ  ಪರೀಕ್ಷೆಗಳನ್ನು ಎದುರಿಸಲು ಪೂರಕವಾಗುವ ತರಬೇತಿಗಳನ್ನು ನೀಡುವ ಚಿಂತನೆ ಇದೆ , ವಿದ್ಯಾರ್ಥಿ ನಿಲಯಗಳಿಗೆ ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ನೀಡುತ್ತೇನೆ ಎಂದರು.   

 ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರು, ಹಿಂದುಳಿಗ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಚಿನ್ ಕುಮಾರ್, ಸಮಗ್ರ ಗಿರಿಜನ ಅಭಿವೃಧ್ದಿ ಯೋಜನಾಧಿಕಾರಿ ದೂದ್‍ಪೀರ್ ಹಾಗೂ ಜಿಲ್ಲೆಯ ವಿವಿಧ ಹಾಸ್ಟಲ್ ಗಳ ವಾರ್ಡನ್ ಗಳು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!