ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ: ತ್ವರಿತ ವಿತರಣೆಗೆ ಮುಖ್ಯಮಂತ್ರಿ ಸೂಚನೆ

 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ: ತ್ವರಿತ ವಿತರಣೆಗೆ ಮುಖ್ಯಮಂತ್ರಿ ಸೂಚನೆ
Share this post


ಬೆಂಗಳೂರು, ಆಗಸ್ಟ್ 24, 2022: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿ ಈ ಕುರಿತು ಚರ್ಚಿಸಿದರು.

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಮೀನುಗಾರಿಕಾ ಇಲಾಖೆಯು ತಮ್ಮ ಬಳಿ ಇರುವ ಮೀನುಗಾರರ ಮಾಹಿತಿಯನ್ನು ಬ್ಯಾಂಕರುಗಳಿಗೆ ಒದಗಿಸಿ, ಅಭಿಯಾನದ ಮಾದರಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವಂತೆ ಸೂಚಿಸಿದರು.

ಮೀನುಗಾರರ ಆದಾಯ ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ಸ್ಯ ಸಂಪದ ಮತ್ತು ಇತರ ಯೋಜನೆಗಳಲ್ಲಿ ಮೀನುಗಾರರಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಮೀನುಗಾರರ ರೈತ ಉತ್ಪಾದಕರ ಸಂಘ ಸ್ಥಾಪನೆ ಮಾಡಿ ನೆರವು ನೀಡಲಾಗುತ್ತಿದೆ. ಮೀನುಗಾರ ಮಹಿಳೆಯರ ಸ್ವಸಹಾಯ ಗುಂಪುಗಳನ್ನು ರಚಿಸಿ ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನೆರವು ನೀಡಲಾಗುವುದು. ಕಿಸಾನ್ ಕ್ರೆಡಿಟ್ ಕಾರ್ಡ್ ಈ ಸೌಲಭ್ಯಗಳ ವಿತರಣೆ ಸಂದರ್ಭದಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೀನುಗಾರರ ಸಹಕಾರ ಬ್ಯಾಂಕ್ ಗಳ ಮೂಲಕವೂ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆಳ ಸಮುದ್ರ ಮೀನುಗಾರಿಕೆ ಬೋಟ್ಗಳ ಖರೀದಿಗೆ ನೆರವು ನೀಡುವ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ಈಗಾಗಲೇ 185 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಜಾರಿಗೊಳಿಸಲಾಗುತ್ತಿರುವ ಈ ಯೋಜನೆಗೆ ಕೇಂದ್ರದ ಅನುಮೋದನೆಯನ್ನು ತ್ವರಿತವಾಗಿ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್, ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ಸಂಚಾಲಕ ಮುರಳಿಕೃಷ್ಣ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!