ಸೆ.2 ರಂದು ಮಂಗಳೂರಿಗೆ ಮೋದಿ: ಸಿದ್ದತೆ ಕುರಿತು ಸಭೆ

 ಸೆ.2 ರಂದು ಮಂಗಳೂರಿಗೆ ಮೋದಿ: ಸಿದ್ದತೆ ಕುರಿತು ಸಭೆ
Share this post

ಮಂಗಳೂರು,ಆ.25, 2022: ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಅಂದಾಜು 3,600 ರಿಂದ 4,500 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಮಂತ್ರಿಗಳು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ತಿಳಿಸಿದರು.

ನಗರಕ್ಕೆ ಪ್ರಧಾನಮಂತ್ರಿಗಳ ಭೇಟಿ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಗುರುವಾರ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೆ.2ರಂದು ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಅಂದಾಜು 3,600 ರಿಂದ 4,500 ಕೋಟಿ ರೂ.ಗಳ ವರೆಗಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಪ್ರಮಾಣದ ಸಾರ್ವಜನಿಕ ಸಮಾರಂಭ ನಡೆಸುವ ಚಿಂತನೆ ಇದೆ, ಅದಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.

ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆದು, ಅಭೂತಪೂರ್ವವಾಗಿ ಯಶಸ್ಸಾಗಬೇಕು. ವಿವಿಧ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಫಲಾನುಭವಿಗಳನ್ನು ಕರೆ ತರುವ ಹಾಗೂ ವಾಪಸ್ಸು ಕಳುಹಿಸಿಕೊಡಲು ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಮಾಡಿಕೊಡಬೇಕು. ಅಂದು ಸಂಜೆ ನಾಲ್ಕು ಗಂಟೆಗೆ ಪ್ರಧಾನ ಮಂತ್ರಿಗಳು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸುವುದರಿಂದ ಅವರು ಬರುವುದಕ್ಕೂ ಮುನ್ನವೇ ಸಾರ್ವಜನಿಕರು ಹಾಗೂ ಫಲಾನುಭವಿಗಳು ಆಗಮಿಸಬೇಕು. ಪ್ರಧಾನಮಂತ್ರಿಗಳ ಕಾರ್ಯಕ್ರಮವಾದ್ದರಿಂದ ಹೆಚ್ಚಿನ ಭದ್ರತೆ ಮತ್ತು ತಪಾಸಣೆ ಇರಲಿದೆ. ನಿಗದಿತ ಸಮಯಕ್ಕೂ ಮುನ್ನ ಸಾರ್ವಜನಿಕರು ಆಗಮಿಸಬೇಕು. ಅವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ ಎಂಬ ಮಾಹಿತಿ ನೀಡಿದರು.  

ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಅವರೇ ನಿರ್ವಹಿಸಬೇಕು, ಹೊರತು ಅದನ್ನು ಇನ್ನೊಬ್ಬರಿಗೆ ಹಸ್ತಾಂತರಿಸಬಾರದು. ಈ ಕಾರ್ಯಕ್ರಮಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ಜಿಲ್ಲೆಗೆ ಮತ್ತಷ್ಟು ಅಭಿವೃದ್ಧಿ ಪ್ಯಾಕೇಜ್ ಘೋಷಿಸುವ ಸಾಧ್ಯತೆಯೂ ಇರಬಹುದು ಎಂದು ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕೇಂದ್ರ ಪುರಸ್ಕೃತ ಸಾಕಷ್ಟು ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿವೆ. ಲಕ್ಷಾಂತರ ಫಲಾನುಭವಿಗಳು ಆ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅವರಿಗೆ ಆಹ್ವಾನ ನೀಡಬೇಕು. ಮತ್ಸ್ಯ ಸಂಪದ ಯೋಜನೆ ಬಗ್ಗೆ ಪ್ರಧಾನ ಮಂತ್ರಿಗಳು ವಿಶೇಷ ಆಸಕ್ತಿ ತಳಿದಿದ್ದಾರೆ. ಮೀನುಗಾರಿಕೆ ಇಲಾಖೆಯಿಂದ ಆ ಫಲಾನುಭವಿಗಳನ್ನು ಆಹ್ವಾನಿಸಬೇಕು. ಪಿ.ಎಂ ಸ್ವಾ-ನಿಧಿ, ಪಿ.ಎಂ.ಇ.ಜಿ.ಪಿ, ಪಿ.ಎಂ-ಕಿಸಾನ್, ಮುದ್ರಾ ಯೋಜನೆ  ಸೇರಿದಂತೆ ಹಲವಾರು ಯೋಜನೆಯ ಫಲಾನುಭವಿಗಳಿಗೆ ಆಮಂತ್ರಣ ನೀಡಬೇಕೆಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾದ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಕಾರ್ಯಕ್ರಮದ ಘನತೆಗೆ ಕುಂದುಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕೆಂದರು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಉನ್ನತ ಮಟ್ಟದ ಭದ್ರತೆ ಇರುತ್ತದೆ, ಕಾರ್ಯಕ್ರಮ ಪ್ರಾರಂಭಕ್ಕೂ ಒಂದು ತಾಸು ಮುನ್ನ ಸ್ಥಳಕ್ಕೆ ಆಗಮಿಸಿ ಸಹಕರಿಸಬೇಕು ಹಾಗೂ ವಾಹನಗಳ ಪಾಕಿರ್ಂಗ್ ವ್ಯವಸ್ಥೆಯ ಮಾಹಿತಿ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶಕುಮಾರ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.

ನವ ಮಂಗಳೂರು ಬಂದು ಪ್ರಾಧಿಕಾರದ ಅಧ್ಯಕ್ಷ ಡಾ. ವೆಂಕಟ ರಮಣ ಅಕ್ಕರಾಜು, ಪ್ರಾಧಿಕಾರದ ಅಧಿಕಾರಿ ಹರಿನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!