ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಾಗ ಸಮನ್ವಯವಿರಲಿ: ಕೂರ್ಮಾರಾವ್

 ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಾಗ ಸಮನ್ವಯವಿರಲಿ: ಕೂರ್ಮಾರಾವ್
Share this post

ಉಡುಪಿ, ಆಗಸ್ಟ್ 29, 2022: ಜಿಲ್ಲೆಯಲ್ಲಿ ಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ, ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗೌರಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆ ಅನುಮತಿ ಪಡೆಯುವಂತೆ ತಿಳಿಸಿ, ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹ ವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ. ಬ್ಯಾನರ್, ಫ್ಲೆಕ್ಸ್ಗಳಲ್ಲಿ ಲೈಸೆನ್ಸ್ ನೀಡಿದ ಸಂಖ್ಯೆ ಮತ್ತು ಅಂತಿಮ ದಿನಾಂಕವನ್ನು ಮುದ್ರಿಸುವಂತೆ ಸೂಚಿಸಿ, ಅನುಮತಿ ನೀಡಿ. ಏಕಗವಾಕ್ಷಿ ಪದ್ಧತಿ ಮೂಲಕ ಆದಷ್ಟು ಶೀಘ್ರದಲ್ಲಿ ಎಲ್ಲಾ ಅನುಮತಿಗಳನ್ನು ನೀಡುವಂತೆ ತಿಳಿಸಿದರು.

ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ಅಗತ್ಯವಿರುವೆಡೆಗಳಲ್ಲಿ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿಗಳು, ವಿಸರ್ಜನಾ ಸ್ಥಳದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸೂಕ್ತ ಬೆಳಕಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯ ಮುಳುಗು ತಜ್ಞರನ್ನು ಆ ಪ್ರದೇಶದಲ್ಲಿ ನಿಯೋಜಿಸುವಂತೆ ತಿಳಿಸಿದರು.

ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ತಾಲೂಕು ಕೇಂದ್ರದಲ್ಲಿ ತಹಶೀಲ್ದಾರ್‌ಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಓ ಗಳು ಅಗತ್ಯ ಅನುಮತಿಗಳನ್ನು ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಶಾಂತಿಯುತ ಗಣೇಶ ಚತುರ್ಥಿ ಆಚರಣೆಗಾಗಿ, ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗೆ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಧ್ವನಿವರ್ಧಕ ಬಳಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!