ಫಲಾನುಭವಿಗಳ ಪಟ್ಟಿ ನೀಡುವಂತೆ ಸಚಿವರ ಸೂಚನೆ
ಮಂಗಳೂರು, ಜ.3, 2022: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಾಲ್ಮೀಕಿ, ಭೋವಿ, ಆದಿ ಜಾಂಬವ, ಅಲೆ ಮಾರಿ ಹಾಗೂ ಅರೆ ಅಲೆಮಾರಿ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿರುವ ಕೊಳವೆ ಬಾವಿಗಳನ್ನು ಕೊರೆಯಿಸಿ ಕೊಡಲು ಅರ್ಹ ಫಲಾನುಭವಿಗಳನ್ನು ಪಟ್ಟಿ ನೀಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಜ.3ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಗೆ 232 ಗುರಿ ನಿಗದಿಪಡಿಸಲಾಗಿದ್ದು, ಎಲ್ಲಾ ಅಭಿವೃದ್ಧಿ ನಿಗಮಗಳು ಸಂಬಂಧಿಸಿದ ಶಾಸಕರ ಅಧ್ಯಕ್ಷತೆಯಲ್ಲಿ ತಮ್ಮ ವ್ಯಾಪ್ತಿಯ ಫಲಾನುಭವಿಗಳನ್ನು ಕೂಡಲೇ ಆಯ್ಕೆ ಮಾಡಿಕೊಡಬೇಕು, ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಅವರು ಸೂಚಿಸಿದರು.
ನಿರುದ್ಯೋಗಿಗಳಿಗೆ ಅನುಕೂಲವಾಗುವಂತೆ ಝೋಮ್ಯಾಟೋ ಸ್ವಿಗ್ಗಿ ಇತರೆ ಕಂಪನಿಗಳೊಂದಿಗೆ ಕೆಲಸ ನಿರ್ವಹಿಸಲು ಇ-ಕಾಮರ್ಸ್ನೊಂದಿಗೆ ಲಿಂಕ್ ಮಾಡಿಕೊಂಡು ವಹಿವಾಟು ನಡೆಸಲು ದ್ವಿಚಕ್ರ ವಾಹನ ಖರೀದಿಗೆ ನೆರವು ನೀಡುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ನೂರು ಫಲಾನುಭವಿಗಳನ್ನು ಆಯ್ಕೆ ಮಾಡುವಂತೆಯೂ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮನಿಷ್, ಈ ಹಿಂದೆ ಜಿಲ್ಲೆಗೆ 36 ಫಲಾನುಭವಿಗಳಿಗೆ ಗುರಿ ನಿಗದಿಪಡಿಸಲಾಗಿತ್ತು. ಈಗ ಹೆಚ್ಚುವರಿಯಾಗಿ ಗುರಿಯನ್ನು ನಿಗದಿಪಡಿಸಲಾಗಿದೆ, ಕೂಡಲೇ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಐವತ್ತು ಸಾವಿರ ಸಬ್ಸಿಡಿ ನೀಡುವ ನೇರ ಸಾಲ ಯೋಜನೆಯಡಿ ಒಂದು ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಶೇ.4ರ ಬಡ್ಡಿ ದರದಲ್ಲಿ ನೀಡಲಾಗುತ್ತಿದೆ, ಈ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಸಂಬಂಧಿಸಿದ ವಿಧಾನ ಪರಿಷತ್ ಶಾಸಕರ ಗಮನಕ್ಕೆ ತರುವಂತೆಯೂ ಸಚಿವರು ತಿಳಿಸಿದರು.
ಅರ್ಹರಿಗೆ ಡಿ.ಸಿ ಮನ್ನಾ ಜಾಗವನ್ನು ನೀಡುವ ಸಂದರ್ಭದಲ್ಲಿ ಅವರು ವಾಸಿಸುತ್ತಿರುವ ಸ್ಥಳದ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಡಿ.ಸಿ ಮನ್ನಾ ಜಾಗ ನೀಡುವಂತೆಯೂ ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು.
ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ ಸಿಂಹ ನಾಯಕ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.