ಸ್ಕ್ಯಾನಿಂಗ್ ಸೆಂಟರ್ ಗಳು ಸರ್ಕಾರದ ನಿಯಮಗಳನ್ನುಪಾಲಿಸಬೇಕು: ಡಾ. ರಾಮಚಂದ್ರ ಬಾಯಾರಿ
ಮಂಗಳೂರು, ಮಾರ್ಚ್, 02, 2021: ವೈದ್ಯಕೀಯ ಸಂಸ್ಥೆಗಳಲ್ಲಿ ಸ್ಕ್ಯಾನಿಂಗ್ ಕಾರ್ಯಗಳನ್ನು ನಿರ್ವಹಿಸುವಾಗ ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕು. ತಪ್ಪಿದ್ದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಗಳ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ ತಿಳಿಸಿದರು.
ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಗರ್ಭಪೂರ್ವ ಮತ್ತು ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ಕ್ಕೆ ಮತ್ತು ನಿಯಮ 1996ರ ಅನುಷ್ಠಾನಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದ್ದಲ್ಲಿ ನಿರ್ದಾಕ್ಷಿಣ್ಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸ್ಕ್ಯಾನಿಂಗ್ ಸೆಂಟರ್ ಗಳ ಪರವಾನಿಗೆ ಪಡೆಯುವ ಸಂದರ್ಭದಲ್ಲಿ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಿಂದ ಅಧಿಕೃತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆದಿರಬೇಕು.
ಸ್ಕ್ಯಾನಿಂಗ್ ಕಾರ್ಯ ಮಾಡುವಾಗ ನಿಯಮಾನುಸಾರ ದಾಖಲೆಗಳನ್ನಿಟ್ಟು ಅವುಗಳಲ್ಲಿ ದೈನಂದಿನ ಕಾರ್ಯಗಳ ಬಗ್ಗೆ ನೋಂದಣಿ ಮಾಡಬೇಕು.
ಭ್ರೂಣಲಿಂಗ ಪತ್ತೆ ಹಚ್ಚುವುದು ಅಪರಾಧ ಹಾಗೂ ಅದರ ಶಿಕ್ಷೆಯ ಬಗ್ಗೆ ಸೂಚಿಸುವ ಫಲಕಗಳನ್ನು ಅಳವಡಿಸಬೇಕು ಎಂದರು.
ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸಮಿತಿ ಸದಸ್ಯರುಗಳು ಅನಿರೀಕ್ಷಿತ ಭೇಟಿಗಳನ್ನು ಆಗಿಂದಾಗ್ಗೆ ಮಾಡಿ ಅಲ್ಲಿನ ನ್ಯೂನತೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ರಾಜೇಶ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ. ವತ್ಸಲ ಕಾಮತ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು, ಯೆನಪೋಯ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ರವಿಚಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ಶೈಲಜಾ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ರೇಡಿಯಾಲಜಿಸ್ಟ್ ಅನಿತ್ ರಾಜ್ ಭಟ್, ಶಾಂತಿ ಸಂದೇಶ ಟ್ರಸ್ಟ್ ನ ನಿರ್ದೇಶಕರಾದ ಸಿಸ್ಟರ್ ದುಲ್ಸಿನ ಕ್ರಾಸ್ತ ಹಾಗೂ ಮತ್ತಿತರರು ಉಪಸ್ಥಿತರಿದ್ದರು.