ಕೋಟ್ಪಾ ಕಾಯ್ದೆ: 2003 ರ ಉನ್ನತ ಅನುಷ್ಠಾನ ಜಿಲ್ಲೆಯಾಗಿ ದ.ಕ ಜಿಲ್ಲೆ
ಮಂಗಳೂರು, ಮಾರ್ಚ್ 30, 2021: ಯುವಜನರು ತಮ್ಮ ಜೀವನವನ್ನು ಕಾಪಾಡಿಕೊಳ್ಳಬೇಕೆಂದರೆ ತಂಬಾಕು ಸೇವನೆಯಿಂದ ದೂರವಿರಬೇಕು ಹಾಗೂ ಕೋಟ್ಪಾ ಕಾಯ್ದೆ-2003 ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಜಿಲ್ಲೆಯನ್ನು ತಂಬಾಕು ಸೇವನೆಯಿಂದ ಮುಕ್ತವಾಗಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ತಿಳಿಸಿದರು.
ಅವರು ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಂಬಾಕು ನಿಯಂತ್ರಣ ಘಟಕದ ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ’ ಯೆಂದು ಘೋಷಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯು 2015 ರಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದು, ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯನ್ನು ರಚಿಸಿ ತ್ರೈಮಾಸಿಕ ಸಭೆಗಳನ್ನು ನಡೆಸಿ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗಿತ್ತು ಎಂದರು.
ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಪಾ ಸೆಕ್ಷನ್-4 ರಂತೆ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಅಳವಡಿಸಲಾಗಿದೆ ಹಾಗೂ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ನಿಷೇಧದ ಬಗ್ಗೆ ಕ್ರಮ ವಹಿಸಲಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಒಟ್ಟು 1197 ಪ್ರಕರಣಗಳನ್ನು ದಾಖಲಿಸಿ, 1.73.020 ರೂಪಾಯಿ ದಂಡ ಹಾಕಲಾಗಿದ್ದು, 500 ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ 1822 ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಎಂದು ಘೋಷಿಸಲಾಗಿದ್ದು, ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಲಾಗಿದೆ ಎಂದ ಅವರು, ಕಳೆದ ಎರಡು ವರ್ಷಗಳಲ್ಲಿ 1650 ತಂಬಾಕು ವ್ಯಸನಿಗಳಿಗೆ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯನ್ನು ಉಚಿತವಾಗಿ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಟ್ಪಾ ಕಾಯ್ದೆಯ ಅನುಷ್ಠಾನಕ್ಕೆ ಶ್ರಮಿಸಿದ ಇಲಾಖೆಯ ಅಧಿಕಾರಿಗಳಿಗೆ ಅಭಿನಂದಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ಸಾರ್ವಜನಿಕ ಶಿಕ್ಷನ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೋ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಮಂಜೇಶ್ ಶೆಟ್ಟಿ, ಅಬಕಾರಿ ಅಧೀಕ್ಷಕರಾದ ಗೀತಾ.ಪಿ, ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.