ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಜೆ
ಕಾರವಾರ, ಮಾರ್ಚ್ 30, 2021: ಜಿಲ್ಲೆಯ ಯಲ್ಲಾಪುರ ನಗರದ ವೈ.ಟಿ.ಎಸ್ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಒಂದೇ ದಿನ 22 ಕೋವಿಡ್-19 ಸೋಂಕಿನ ಪ್ರಕರಣಗಳು ಕಂಡುಬಂದಿದ್ದರಿಂದ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಾ. 31 ರಿಂದ ಏಪ್ರಿಲ್ 2 ರವರೆಗ ಸಂಸ್ಥೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಹಿತದೃಷ್ಟೀಯಿಂದ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಈ ಶಾಲೆಗೆ ಮಾತ್ರ ರಜೆ ಘೋಷಿಸಿ, ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ತಮ್ಮ ಆದೇಶದಲ್ಲಿ ಹೇಳಿದ್ದಾರೆ.
ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೂ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.