ಜಿಲ್ಲೆಯಲ್ಲಿ ಚೆಕ್ ಪೋಸ್ಟ್ಗಳ ನಿರ್ಮಾಣ : ಜಿ.ಜಗದೀಶ್
ಉಡುಪಿ, ಎಪ್ರಿಲ್ 27, 2021: ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 27 ರಿಂದ ಮೇ 12 ರ ವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ತೆರೆದು ಅನಗತ್ಯ ವಾಹನ ಸಂಚಾರವನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಗಡಿಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ, ವೈದ್ಯಕೀಯ ಕಾರಣಗಳಿಂದ ಮತ್ತು ಸೂಕ್ತ ಪಾಸ್‌ಗಳನ್ನು ಪಡೆದು ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಿ ಪ್ರವೇಶಿಸಲು ಅವಕಾಶ ನೀಡಿ ಎಂದು ಡಿಸಿ ಹೇಳಿದರು.
ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 10 ವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ಅಂಗಡಿಗಳ ಮುಂದೆ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ಅಧಿಕಾರಿಗಳು ಪರಿಶೀಲಿಸಬೇಕು. ಬೆಳಗ್ಗೆ 10 ಗಂಟೆಯ ನಂತರವೂ ಅನಾವಶ್ಯಕವಾಗಿ ತೆರೆದಿರುವ ಅಂಗಡಿಗಳ ಲೈಸೆನ್ಸ್ ಗಳನ್ನು ಕೋವಿಡ್ ಮುಗಿಯುವವೆರೆಗೂ ಅಮಾನತು ಮಾಡಿ ಎಂದು ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೂಕ್ತ ಅನುಮತಿಯೊಂದಿಗೆ ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಅವಕಾಶ ನೀಡಲಾಗುವುದು ಹಾಗೂ ರಕ್ತದಾನ ಮಾಡಲು ತೆರಳುವವರಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಹೋಂ ಐಸೋಲೇಷನ್ ಮತ್ತು ಹೋಂ ಕ್ವಾರಂಟೈನ್ ನಲ್ಲಿರುವವನ್ನು ನಿಯಮಿತವಾಗಿ ಭೇಟಿ ನೀಡಿ ವರದಿ ನೀಡಬೇಕು. ಇದರಲ್ಲಿ 100% ಸಾಧನೆ ಆಗಬೇಕು. ಪಾಸಿಟಿವ್ ಇದ್ದು, ಹೋಂ ಐಸೋಲೇಷನ್ ನಿಂದ ಹೊರಬರುವವರು ಮತ್ತು ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಂಚರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.
ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಕಂಟೈನ್ಮೆಂಟ್ಟ್ ಝೋನ್ ಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಬೇಗ ಪತ್ತೆಹಚ್ಚಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಜಿಲ್ಲಾಡಳಿತದಿಂದ ರೆಫರ್ ಮಾಡುವ ಕೋವಿಡ್ ಸೋಂಕಿತರಿಗೆ 75% ಬೆಡ್‌ಗಳು ಮೀಸಲಿಟ್ಟಿರುವ ಕುರಿತಂತೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿ, ಹೋಂ ಐಸೋಲೇಷನ್ ಇರಲು ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದಿರುವವರಿಗೆ ಹೋಂ ಕೇರ್ ಸೆಂಟರ್ ತೆರೆಯುವ ಬಗ್ಗೆ ಕ್ರಮ ಕೈಗೊಳ್ಳಿ. ಮುಂಜಾಗ್ರತೆಯಾಗಿ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳು ಲಭ್ಯವಿರುವ ರೀತಿ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದರು.
ಎಲ್ಲಾ ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಈ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದರು.
ಈ ಹಿಂದೆ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತವು ಇಡೀ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸಿತ್ತು. ಈ ಬಾರಿಯೂ ಕೂಡಾ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಾರ್ವಜನಿಕರೂ ಸಹ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿ.ಜಗದೀಶ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.