ಮುಂಗಾರು ವಿಕೋಪ ನಿರ್ವಹಣೆಗೆ ಉಡುಪಿ ಜಿಲ್ಲೆ ಸನ್ನದ್ಧ
ಉಡುಪಿ ಮೇ 31, 2021: ಜಿಲ್ಲೆಗೆ ಇನ್ನು 2 -3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.
ಅವರು ಇಂದು ವೀಡಿಯೋ ಸಂವಾದದ ಮೂಲಕ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಅಗತ್ಯ ಸೂಚನೆ, ನಿರ್ದೇಶನಗಳನ್ನು ನೀಡಿದರು.
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಕ್ರಮಗಳನ್ನು ತುರ್ತಾಗಿ ಕೈಗೊಂಡು ಚರಂಡಿ ಮತ್ತು ರಾಜ ಕಾಲುವೆಗಳಿಂದ ಮೇಲೆತ್ತಿದ್ದ ಮಣ್ಣನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ 24×7 ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಸಿದ್ಧವಾಗಿಟ್ಟುಕೊಳ್ಳಲು ಹೇಳಿದ ಜಿಲ್ಲಾಧಿಕಾರಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ನಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿರುವಂತೆ ಸೂಚನೆ ನೀಡಿದರು.
ಅರಣ್ಯ ಇಲಾಖೆ: ಅರಣ್ಯ ಇಲಾಖೆಯಿಂದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯವಿರುವ ಎಲ್ಲಾ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚನೆ ನೀಡಿದರು.
ಅರೋಗ್ಯ ಇಲಾಖೆ: ಅರೋಗ್ಯ ಇಲಾಖೆ ವತಿಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಈ ಬಗ್ಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೂಚನೆ ನೀಡುವಂತೆ ತಿಳಿಸಿದರು.
ಅಗ್ನಿಶಾಮಕ ಇಲಾಖೆ: ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರುವಂತೆ ಅಗ್ನಿಶಾಮಕ ಇಲಾಖೆಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಗೃಹರಕ್ಷಕ ದಳ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಕಡಿತ ಉಂಟಾದಲ್ಲಿ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಿ. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿAದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಿ ಎಂದು ಸೂಚಿಸಿದರು.
ಮೀನುಗಾರಿಕಾ ಇಲಾಖೆ: ಜಿಲ್ಲೆಯಲ್ಲಿ ಮೀನುಗಾರಿಕೆಗೆ ಮೇ 31 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ನಂತರ ಬಂದರಿನಲ್ಲಿ ಮೀನುಗಾರಿಕೆ ನಡೆಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಎಪಿಡೆಮಿಕ್ ಕಾಯಿದೆ ಹಾಗೂ ಮೀನುಗಾರಿಕಾ ಆದೇಶ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸುವಂತೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಈ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ಗಳಿಗೆ ಸೂಚನೆ ನೀಡಿದರು.
ಗಣಿ ಇಲಾಖೆ: ಕಲ್ಲುಕೋರೆಗಳಲ್ಲಿ ನೀರು ತುಂಬಿ ಜೀವಹಾನಿ ಸಂಭವಿಸಿದ್ದಲ್ಲಿ ಕೋರೆಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಅವಧಿ ಮುಗಿದ ಕೋರೆಗಳ ಬಳಿ ಗಣಿ ಇಲಾಖೆ ವತಿಯಿಂದ ಸೂಕ್ತ ಬೇಲಿ ಹಾಗೂ ಎಚ್ಚರಿಕೆ ಫಲಕ ಅಳವಡಿಸಬೇಕು. ಅನಾಹುತ ಸಂಭವಿಸಿದ್ದಲ್ಲಿ ಗಣಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೃಷಿ ಹೊಂಡಗಳ ಬಳಿ ಸಹ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಮಳೆಯಿಂದ ಜೀವಹಾನಿ, ಜಾನುವಾರು ಹಾನಿಯಾದಲ್ಲಿ ಕೂಡಲೇ ಪರಿಹಾರ ವಿತರಿಸುವಂತೆ ಎಲ್ಲಾ ತಹಸೀಲ್ದಾರ್ಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಪರಿಹಾರ ವಿತರಣೆಗೆ ಹಣದ ಕೊರತೆಯಿಲ್ಲ. ಎಲ್ಲಾ ತಹಸೀಲ್ದಾರ್ಗಳು ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಜಿಲ್ಲಾಧಿಕಾರಿ ಕಚೇರಿಯಿಂದ ಪಡೆಯುವಂತೆ ಹಾಗೂ ಬೆಳೆ ಹಾನಿ ಸಂಭವಿಸಿದ್ದಲ್ಲಿ ಸೂಕ್ತ ರೀತಿಯಲ್ಲಿ ಅಂದಾಜು ನಷ್ಟದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ರಾಷ್ಟ್ರೀಯ ಹೆದ್ದಾರಿ: ಕುಂದಾಪುರ ಫ್ಲೈ ಓವರ್ ಕೆಳಗೆ ನೀರು ನಿಲ್ಲದ ಹಾಗೆ ತಕ್ಷಣ ಸೂಕ್ತ ಕ್ರಮ ಕೈಗೊಂಡು, ನೀರು ಸರಾಗವಾಗಿ ಹರಿದುಹೋಗಲು ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಸರ್ವಿಸ್ ರಸ್ತೆಗಳಲ್ಲಿ ಸಹ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಸ್ಥಳಾಂತರಿಸಲು ಅಗತ್ಯವಿರುವ ದೋಣಿಗಳು, ಮುಳುಗು ತಜ್ಞರು ಮತ್ತು ಪರಿಣಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಕಾಳಜಿ ಕೇಂದ್ರಗಳನ್ನು ತೆರೆಯಲು ಅನುಕೂಲವಾಗುವಂತೆ ಶಾಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಸೈಕ್ಲೋನ್ ಸೆಂಟರ್ಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸದಾ ಸನ್ನದ್ಧವಾಗಿ ಕೇಂದ್ರಸ್ಥಾನದಲ್ಲಿರುವAತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.
ಕರಾವಳಿ ಕಾವಲು ಪಡೆ: ಕರಾವಳಿ ಕಾವಲು ಪಡೆಯಿಂದ ಪ್ರಾಕೃತಿಕ ವಿಕೋಪ ತಡೆಯಲು ತರಬೇತುಗೊಂಡ ತಂಡ ಇದ್ದು, ಬೋಟ್ಗಳು ಸಹ ಇವೆ. ಎಲ್ಲಾ ಮೀನುಗಾರರಿಗೆ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ತಿಳಿಸಿದರು.
ಪೊಲೀಸ್ ಇಲಾಖೆ: ಪೊಲೀಸ್ ಇಲಾಖೆ ವತಿಯಿಂದ ಪ್ರಾಕೃತಿಕ ವಿಕೋಪ ತಡೆಗೆ ತರಬೇತುಗೊಂಡ ಪೋಲಿಸ್ನ 10 ತಂಡಗಳು ಇದ್ದು, ಯಾವುದೇ ಸಂದರ್ಭದಲ್ಲಿ ಲಭ್ಯವಿರುವುದಾಗಿ ಎಎಸ್ಪಿ ಕುಮಾರ ಚಂದ್ರ ತಿಳಿಸಿದರು.
ವೀಡಿಯೋ ಸಂವಾದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.