ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು: ಮಾಧುಸ್ವಾಮಿ
ಮಂಗಳೂರು, ಜುಲೈ 03, 2021: ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಮಾಸ್ಟರ್ ಪ್ಲಾನ್ ಅನ್ನು ಸಂಬಂಧಿಸಿದ ಶಾಸಕರ ಗಮನಕ್ಕೆ ತರಲಾಗುವುದು, ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ. ಸಿ. ಮಧುಸ್ವಾಮಿ ಹೇಳಿದರು.
ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕೈಗೊಳ್ಳಲಾದ ವಿವಿಧ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದರನ್ವಯ ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯುವ ನೀರು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದರು.
ಇಲಾಖೆಯಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರೆಯಲಾದ ಟೆಂಡರುಗಳನ್ನು ಬೇಗ ಅನುಮತಿ ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಇಲಾಖೆಯ ಮೈಸೂರು ವೃತ್ತದ ಎಸ್ ಸಿ ರಾಜಶೇಖರ ಯಡಳ್ಳಿ, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೋಕುಲದಾಸ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಷ್ಣು ಕಾಮತ್, ಸಿಬ್ಬಂದಿಗಳಾದ ಶಿವ ಪ್ರಸನ್ನ, ರಾಕೇಶ್, ಆನಂದ್, ಲವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.