ಪ್ರತಿಯೊಬ್ಬರ ಸ್ವಾಭಿಮಾನದ ಬದುಕು ಅಂತ್ಯೋದಯದ ಆಶಯ: ಎ. ನಾರಾಯಣ ಸ್ವಾಮಿ

 ಪ್ರತಿಯೊಬ್ಬರ ಸ್ವಾಭಿಮಾನದ ಬದುಕು ಅಂತ್ಯೋದಯದ ಆಶಯ: ಎ. ನಾರಾಯಣ ಸ್ವಾಮಿ
Share this post

ಮಂಗಳೂರು, ಅ.4, 2021: ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸರಕಾರ ನೀಡುವ ಸವಲತ್ತುಗಳು ತಲುಪಬೇಕು ಹಾಗೂ ಆ ಮೂಲಕ ಅವರನ್ನು ಸ್ವಾವಲಂಭಿಗಳನ್ನಾಗಿಸಬೇಕು, ಪ್ರತಿಯೊಬ್ಬ ವ್ಯಕ್ತಿಯೂ ಸ್ವಾಭಿಮಾನದಿಂದ ಬದುಕಬೇಕು ಎಂಬುದು ಅಂತ್ಯೋದಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಬಂಟ್ವಾಳದ ಬಂಟರ ಭವನದಲ್ಲಿ ಏರ್ಪಡಿಸಲಾದ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಉಸ್ತುವಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸಬೇಕು. ಅಂತ್ಯೋದಯ ಕಾರ್ಯಕ್ರಮ ಅನುಷ್ಠಾನ ಹಬ್ಬವಾಗಿ ಮಾರ್ಪಾಡಾಗಲಿ. ಪ್ರತಿ ಜಿಲ್ಲೆಯಲ್ಲೂ ಜಾಗೃತಿ ಸಮಿತಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಅಂದರು.

ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾದಂಥ ಕಾರ್ಯಕ್ರಮಗಳ ಸಹಿತ ವಿವಿಧ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯ ಗ್ರಾಮಮಟ್ಟದಲ್ಲಿ ಆಗಬೇಕು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಾಗೃತಿ ಸಮಿತಿ ಕಡ್ಡಾಯವಾಗಿ ಜಾರಿಯಾಗಬೇಕು. ಇಂದು ಯುವಕರು ಸಾಮಾಜಿಕ ಜಾಲತಾಣಗಳ ಸದುಪಯೋಗವನ್ನು ಮಾಡಿಕೊಳ್ಳಬೇಕಾಗಿದ್ದು, ಇಲಾಖೆಯ ವಿಚಾರಗಳನ್ನು ಗಮನಿಸಿ, ಸೌಲಭ್ಯಗಳನ್ನು ಜನರಿಗೆ ಪ್ರಸಾರ ಮಾಡುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಆಶಯಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಗ್ರಾಮ ಪಂಚಾಯತ್ ಕೇಂದ್ರವಾಗಿಟ್ಟುಕೊಂಡು ಯಾರೇ ಫಲಾನುಭವಿಗಳು ನೇರವಾಗಿ ಗ್ರಾಮ ಪಂಚಾಯತಿಗೆ ಬಂದು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳು ಕೂಡಾ ಗ್ರಾಮ ಪಂಚಾಯತ್‍ಗಳ ಮೂಲಕ ಹಾಗೂ ತಾಲೂಕು ಅಧಿಕಾರಿಗಳ ಮೂಲಕ ಮಾಡಲಾಗುತ್ತದೆ. ಈ ಯೋಜನೆ ಕಾರ್ಯಗತಗೊಳಿಸಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳು ಸಕ್ರೀಯವಾಗಿ ಸಹಕಾರ ನೀಡಬೇಕು. ಆ ಕಾರಣಕ್ಕೆ ಜನಪ್ರತಿನಿಧಿಗಳೊಂದಿಗೆ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ 26 ಸಾವಿರ ಕೋಟಿ ರೂ ಅನುದಾನ ಇದೆ. ರಾಜ್ಯದ ಪರಿಶಿಷ್ಟ ಜಾತಿ ವ್ಯಾಪ್ತಿಯಲ್ಲಿ 1 ಕೋಟಿ 27 ಲಕ್ಷ ಜನರಿದ್ದಾರೆ. 28 ಲಕ್ಷ ಕುಟುಂಬಗಳಿವೆ. ಅವುಗಳಲ್ಲಿ ಸ್ವಂತ ಮನೆಗಳಲ್ಲಿದ್ದ ಕುಟುಂಬಗಳಿಗೆ ಮನೆಗಳನ್ನು ಒದಗಿಸುವ ಕೆಲಸ ಮಾಡಲಾಗುವುದು, ಮುಂದಿನ ವರ್ಷಗಳಲ್ಲಿ ಇಲಾಖೆ ಇನ್ನಷ್ಟು ಸಕ್ರಿಯವಾಗಿ ಜನರ ನಡುವೆ ಕೆಲಸ ಮಾಡಲಿದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಹಲವು ಬಾರಿ ಯಾವ್ಯಾವ ಜಾತಿಯವರಿಗೆ ಯಾವ ಮೀಸಲಾತಿ ಇದೆ ಎಂಬುದು ಗೊತ್ತಿರುವುದಿಲ್ಲ. ತಮ್ಮ ಊರಿನಲ್ಲಿ ಮೀಸಲಾತಿ ಪಟ್ಟಿಯಲ್ಲಿ ಸೇರದ ಅರ್ಹರ ವಿವರಗಳನ್ನು ಆಯೋಗಕ್ಕೆ ಜನರು ನೀಡಬೇಕು ಎಂದು ಗ್ರಾಮ ಪಂಚಾಯತ್ ಪ್ರತಿನಿಧಿಗಳಿಗೆ ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಬದುಕುವ ಹಕ್ಕು ಅಂತ್ಯೋದಯ ಎಂಬುದು ದೀನ್ ದಯಾಳ್ ಉಪಾಧ್ಯಾಯ ಪರಿಕಲ್ಪನೆ. ಗ್ರಾಮೋತ್ಥಾನದ ಪರಿಕಲ್ಪನೆ ರಾಮರಾಜ್ಯ ನಿರ್ಮಾಣ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ಗ್ರಾಪಂ ಪರಿಕಲ್ಪನೆ ಮೂಲಕ ರಾಷ್ಟ್ರೋತ್ಥಾನ ಎಂಬ ಕಲ್ಪನೆಯಡಿ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡಿದ್ದಾರೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್, ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನಪರಿಷತ್ತು ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರವಿಕುಮಾರ್, ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತೀನ್ ಕುಮಾರ್, ಎಂಎಸ್‍ಐಎಲ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ, ಲಿಡ್‍ಕರ್ ಅಧ್ಯಕ್ಷ ಪ್ರೊ. ಲಿಂಗಣ್ಣ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಚ್. ಹನುಮಂತಯ್ಯ, ತುಂಬೆ ಗ್ರಾಪಂ ಅಧ್ಯಕ್ಷ ಪ್ರವೀಣ್ ಬಿ. ತುಂಬೆ, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕಾದೇವಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರವಿಕುಮಾರ್ ಸುರಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ. ವಸಂತ್ ಕುಮಾರ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಸಿದ್ದೇಶ್ವರ್ ಎನ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ. ಯೋಗೀಶ್ ಎಸ್.ಜಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಸಮನ್ವಯಾಧಿಕಾರಿ ಡಾ. ಹೇಮಲತಾ ಬಿ.ಎಸ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Subscribe to our newsletter!

Other related posts

error: Content is protected !!