ಕೊವೀಡ್-19 ಪರಿಸ್ಥಿತಿಯಲ್ಲಿ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ – ದಿವಾಕರ್ ಪಾಂಡೇಶ್ವರ್
ಮಂಗಳೂರು ಅ 07: -ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು.
ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತದೆ ಎಂದು ಹೇಳಿದರು.
ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಮಾತನಾಡಿ, ಪೌರಕಾರ್ಮಿಕರು ದಿನನಿತ್ಯ ಸಂತೋಷದಿಂದ ಹಾಗೂ ಅಷ್ಟೇ ಪ್ರಾಮಾಣಿಕವಾಗಿ ಸ್ವಚ್ಛತೆಯ ಕರ್ತವ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಅವರಿಗೆ ಎಲ್ಲಾ ಸೌಲಭ್ಯಗಳು ಸಿಗಬೇಕು ಪಾಲಿಕೆಯ ವತಿಯಿಂದ ಅವರ ಬೇಡಿಕೆಗಳಿಗೆ ಅನುಗುಣವಾಗಿ ಪೂರಕ ವ್ಯವಸ್ಥೆ ಮಾಡಲಾಗುತ್ತದೆ. ಪೌರಕಾರ್ಮಿಕರು ತ್ಯಾಜ್ಯಾ ವಿಲೇವಾರಿ, ತ್ಯಾಜ್ಯಾ ಸಂಗ್ರಹಣೆ, ಇತ್ಯಾದಿ ಸ್ವಚ್ಛತಾ ಸೇವೆಯನ್ನು ಅಚ್ಚುಕಟ್ಟಾಗಿ ಮಾಡುವ ಮೂಲಕ ದೇಶಸೇವೆಯನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ 15 ಪೌರಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪಮೇಯರ್ ವೇದಾವತಿ, ಪಾಲಿಕೆಯ ಉಪಆಯುಕ್ತ ಡಾ. ಸಂತೋಷ್ ಕುಮಾರ್, ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷ ಕಿರಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.