ಗೃಹ ಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿ: ಗಂಗೂಬಾಯಿ ಮಾನಕರ
ಕಾರವಾರ, ಆ.25, 2023: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ “ಗೃಹ ಲಕ್ಷ್ಮಿ” ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಅದರ ನೇರ ಪ್ರಸಾರದ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ನಿರ್ದೇಶನ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ “ಗೃಹ ಲಕ್ಷ್ಮಿ” ಕಾರ್ಯಕ್ರಮಕ್ಕೆ ಚಾಲನೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ. ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಮಾಡಬೇಕಾದ ಕಾರಣ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಸ್ಥಳಗಳಲ್ಲಿ ಎಲ್.ಇ.ಡಿ ವಾಲ್, ಸ್ಕ್ರೀನ್ ವ್ಯವಸ್ಥೆ, ಧ್ವನಿವರ್ಧಕ ಅಳವಡಿಸಬೇಕು. ಇದರ ನಿರ್ವಹಣೆಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ತಹಶೀಲ್ದಾರ, ತಾಲೂಕ ಪಂಚಾಯತ್, ಸಿ.ಡಿ.ಪಿ.ಒ ಅವರ ಮೇಲುಸ್ತುವಾರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ನೋಡಲ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಬೇಕು. ಮಾನ್ಯ ಮುಖ್ಯಮಂತ್ರಿಗಳು ಫಲಾನುಭವಿಗಳ ಜೊತೆ ನೇರ ಸಂವಾದ ಮಾಡುವ ಸಂಭವವಿರುವದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲೆಯ ನೊಂದಾಯಿತ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ 2,000 ರೂ. ಹಣ ವರ್ಗಾವಣೆ ಮಾಡಲು ಸಹ ಅನುದಾನ ಜಿಲ್ಲೆಗೆ ಬಿಡುಗಡೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಮತ್ತು ಮುಂದಾಳತ್ವ ವಹಿಸಬೇಕು. ಇತರೆ ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಪರಸ್ಪರ ಸಮನ್ವಯತೆಯಿಂದ ಒಟ್ಟಾರೆ ಎಲ್ಲಿಯೂ ಲೋಪವಾಗದಂತೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿ ರಾಜು ಮೋಗವಿರ ಮಾತನಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸೇರಿಸಿ ಸ್ಥಳೀಯ ಹಬ್ಬದ ವಾತಾವರಣದಂತೆ ಅಚ್ಚು ಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ದೇವರಾಜ, ಕಲ್ಯಾಣಿ ಕಾಂಬಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸ್ಟೇಲಾ ವರ್ಗಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್.ಎಚ್. ಕುಕ್ಕನೂರ, ತಾಲೂಕು ತಹಶೀಲ್ದಾರರು, ಸಿ.ಡಿ.ಪಿ.ಓ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.