ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ: ಜಿಲಾಧಿಕಾರಿ ಆದೇಶ
ಮಂಗಳೂರು ಅ 27 : ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ರಾಜೇಂದ್ರ ಕೆ.ವಿ ಅವರು ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶಿಸಿರುತ್ತಾರೆ.
- ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಮಯದಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
- ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೊವೀಡ್-19 ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.
- ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.
- ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು.
- 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು.
- ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು.
- ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.
ಮೇಲ್ಕಂಡ ನಿರ್ದೇಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.